ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಹೈಕೋರ್ಟ್ ಆದೇಶವನ್ನು 'ರಾಜಕೀಯ ತೀರ್ಪು' ಎಂದು ವ್ಯಾಖ್ಯಾನಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ನ್ಯಾಯಾಂಗ ನಿಂದನೆ ಎಸಗಿದ್ದು, ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅನುಮತಿ ನೀಡಬೇಕು ಎಂದು ಕೋರಿ ರಾಜ್ಯ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರಿಗೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಪತ್ರ ಬರೆದಿದ್ದಾರೆ.
ಚಾಮರಾಜಪೇಟೆ ಕಾಂಗ್ರೆಸ್ ಶಾಸಕರಾಗಿದ್ದ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಿಮಿನಲ್ ಪ್ರಕ್ರಿಯೆ ಆರಂಭಿಸಲು ನ್ಯಾಯಾಂಗ ನಿಂದನೆ ಕಾಯಿದೆ 1971 ಸೆಕ್ಷನ್ 15(ಅ)(ಬಿ) ಅಡಿ ಒಪ್ಪಿಗೆ ನೀಡುವಂತೆ ಅಡ್ವೊಕೇಟ್ ಜನರಲ್‌ಗೆ ಮೂಲ ದಾವೆಯಲ್ಲಿ ಪ್ರತಿವಾದಿ ಆಗಿರುವ ಅಬ್ರಹಾಂ ಮನವಿ ಮಾಡಿದ್ದಾರೆ.
ಅಬ್ರಹಾಂ ಪತ್ರದಲ್ಲಿ ಏನಿದೆ?: ಸೆಪ್ಟೆಂಬರ್ 26ರಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಜಮೀರ್ ಅವರು ಹೈಕೋರ್ಟ್ ತೀರ್ಪನ್ನು ರಾಜಕೀಯ ತೀರ್ಪು ಎಂದು ವ್ಯಾಖ್ಯಾನಿಸಿದ್ದಾರೆ. ಈ ಮೂಲಕ ಉದ್ದೇಶಪೂರ್ವಕವಾಗಿ ಜಮೀರ್ ಅವರು ನ್ಯಾಯಾಂಗದ ಘನತೆಗೆ ಚ್ಯುತಿ ಉಂಟು ಮಾಡಿದ್ದಾರೆ. ಅಲ್ಲದೇ, ಸಾರ್ವಜನಿಕರ ದೃಷ್ಟಿಯಲ್ಲಿ ನ್ಯಾಯಾಂಗದ ಘನತೆಗೆ ಧಕ್ಕೆ ಉಂಟು ಮಾಡಿದ್ದಾರೆ. ಈ ಸಂಬಂಧ ಜಮೀರ್ ಅವರು ಮಾಧ್ಯಮಗಳಿಗೆ ನೀಡಿರುವ ಪ್ರತಿಕ್ರಿಯೆ ಸಿಡಿ ಯಲ್ಲಿ ಅಡಕಗೊಳಿಸಲಾಗಿದೆ ಎಂದು ಅಬ್ರಹಾಂ ಪತ್ರದಲ್ಲಿ ವಿವರಿಸಿದ್ದಾರೆ.
ಇದನ್ನೂ ಓದಿ: ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇನೆ : ಟಿ ಜೆ ಅಬ್ರಹಾಂ ಎಚ್ಚರಿಕೆ - T J Abraham
ಆ ಮೂಲಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪ್ರಾಮಾಣಿಕತೆಗೆ ಮಸಿ ಬಳಿಯುವ ಕೆಲಸ ಮಾಡಿದ್ದು, ಸಾರ್ವಜನಿಕರ ದೃಷ್ಟಿಯಲ್ಲಿ ಹೈಕೋರ್ಟ್ ಅನ್ನು ನಕಾರಾತ್ಮಕವಾಗಿ ಬಿಂಬಿಸುವ ಯತ್ನ ಮಾಡಿದ್ದಾರೆ. ನ್ಯಾಯಾಂಗ ನಿಂದನೆ ಕಾಯಿದೆಯ ಉದ್ದೇಶ ನ್ಯಾಯದಾನ ಮಾಡುವ ನ್ಯಾಯಾಲಯದ ಘನತೆಯನ್ನು ಎತ್ತಿ ಹಿಡಿಯುವುದಷ್ಟೇ ಅಲ್ಲ, ತೀರ್ಪು ನೀಡುವ ನ್ಯಾಯಮೂರ್ತಿಗಳ ಪ್ರಾಮಾಣಿಕತೆ, ಪಾವಿತ್ರ್ಯತೆ ಎತ್ತಿ ಹಿಡಿಯುವುದೂ ಆಗಿದೆ ಎಂದು ಪತ್ರದಲ್ಲಿ ಕೊರಿದ್ದಾರೆ.