ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕಾಣಿಯೂರು ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ) ವತಿಯಿಂದ ಅನಧಿಕೃತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್ ಆಚಾರ್ಯ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯಪೀಠ, ರಾಜ್ಯ ಸರ್ಕಾರದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ, ಬೆಳ್ತಂಗಡಿ ತಹಶೀಲ್ದಾರ್ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿತು.
ಕಾಣಿಯೂರು ಗ್ರಾಮದ ಸರ್ವೆ ನಂಬರ್ 27/1 ಎ ಇದರಲ್ಲಿ 11 ಎಕರೆ 90 ಸೆಂಟ್ಸ್ ಸರ್ಕಾರಿ ಜಮೀನು ಇದೆ. ಇದಕ್ಕೆ ಹೊಂದಿಕೊಂಡ ಸರ್ವೆ ನಂಬರ್ 265/1ಎ1 ರಲ್ಲಿ 1 ಎಕರೆ 83 ಸೆಂಟ್ಸ್ ಜಾಗದಲ್ಲಿ ಸರ್ಕಾರಿ ಆಟದ ಮೈದಾನವಿದೆ. ಈ ಪೈಕಿ ಸರ್ವೆ ನಂಬರ್ 27/1ಎ ದಲ್ಲಿರುವ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಮಹಾಗಣಪತಿ ಸೇವಾ ಟ್ರಸ್ಟ್ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಆದ್ದರಿಂದ ಒತ್ತವರಿಯಾಗಿರುವ ಸರ್ಕಾರಿ ಜಾಗವನ್ನು ವಾಪಸ್ ಪಡೆಯಬೇಕು. ಅಲ್ಲದೇ ಅರ್ಜಿದಾರರು 2024ರ ಜುಲೈ 22 ಹಾಗೂ ಆಗಸ್ಟ್ 5ರಂದು ನೀಡಿರುವ ಮನವಿಯಂತೆ ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡವನ್ನು ತೆರವುಗೊಳಿಸುವಂತೆ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.