ಬೆಂಗಳೂರು: "ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣ ತನಿಖೆಯಲ್ಲಿರುವುದರಿಂದ ಯಾವುದೇ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ" ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
"ಹಗರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು, 'ಮಾಜಿ ಸಚಿವ ಬಿ.ನಾಗೇಂದ್ರ ಅವರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ' ಒತ್ತಡ ಹಾಕಿದ್ದಾರೆ. ಹಾಗೂ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು.
ಅದರನ್ವಯ ಶಾಂತಿನಗರದ ಇಡಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಣ್ಣನ್ ಹಾಗೂ ಮಿತ್ತಲ್ ಎಂಬ ಇಬ್ಬರು ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.