ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ಕುರಿತು ಸಿಐಡಿ ತನಿಖೆ ಎದುರಿಸಿದ್ದ ವಕೀಲೆ ಎಸ್. ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯ ವಿವರಗಳನ್ನು ಒದಗಿಸುವಂತೆ ಹೈಕೋರ್ಟ್ ಸೂಚಿಸಿದ ಬೆನ್ನಲ್ಲೇ ಸಿಸಿಬಿ ಪೊಲೀಸರಿಂದ ಪ್ರಕರಣದ ತನಿಖೆ ಚುರುಕು ಪಡೆದಿದೆ.
ಜೀವಾ ಆತ್ಮಹತ್ಯೆಯ ಕುರಿತು ಅವರ ಕುಟುಂಬದವರ ಹೇಳಿಕೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ್ತೊಂದೆಡೆ ಆತ್ಮಹತ್ಯೆಗೂ ಮುನ್ನ ಬರೆದಿದ್ದಾರೆ ಎನ್ನಲಾಗಿರುವ ಡೆತ್ ನೋಟ್‌ನ್ನು ಕೈಬರಹದ ದೃಢೀಕರಣಕ್ಕಾಗಿ ಎಫ್ಎಸ್ಎಲ್‌ಗೆ ರವಾನಿಸಲಾಗಿದೆ. ಬಳಿಕ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಐಡಿ ಅಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಸಿಸಿಬಿ ಸಿದ್ಧತೆ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭೋವಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಐಡಿ ವಿಚಾರಣೆ ಎದುರಿಸಿದ್ದ, ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖಾ ಪ್ರಗತಿಯ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ಪ್ರಾಸಿಕ್ಯೂಷನ್‌ಗೆ ಇತ್ತೀಚಿಗೆ ಹೈಕೋರ್ಟ್ ಆದೇಶಿಸಿತ್ತು.
ಪ್ರಕರಣದ ಹಿನ್ನೆಲೆ: ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮಟಿರಿಯಲ್ಸ್ ಪೂರೈಸುತ್ತಿದ್ದ ಎಸ್. ಜೀವಾ ಆತ್ಮಹತ್ಯೆಗೆ ಶರಣಾದ ಘಟನೆ ನವೆಂಬರ್ 22ರಂದು ನಡೆದಿತ್ತು. ಬನಶಂಕರಿ ಠಾಣೆ ವ್ಯಾಪ್ತಿಯ ರಾಘವೇಂದ್ರ ಲೇಔಟಿನಲ್ಲಿರುವ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು.
ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ಜೀವಾಗೆ ಸಿಐಡಿಯ ಡಿವೈಎಸ್‌ಪಿ ಕನಕಲಕ್ಷ್ಮಿ ಮಾನಸಿಕ ಕಿರುಕುಳ ನೀಡಿದ್ದಾರೆ, ಹಾಗೂ 25 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಮೃತಳ ಸಹೋದರಿ ಸಂಗೀತಾ ಆರೋಪಿಸಿದ್ದರು. ಜೀವಾ ಬರೆದಿಟ್ಟಿದ್ದ ಡೆತ್ ನೋಟ್ ಹಾಗೂ ಮೃತಳ ಸಹೋದರಿ ನೀಡಿದ್ದ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದ ಬನಶಂಕರಿ ಠಾಣೆ ಪೊಲೀಸರು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಎಸಿಪಿ ಹಂತದ ಅಧಿಕಾರಿಯ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದರು.
ಇದನ್ನೂ ಓದಿ: ವಕೀಲೆ ಎಸ್.ಜೀವಾ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಕೋರಿರುವ ಅರ್ಜಿ ತೀರ್ಪು ಶುಕ್ರವಾರ ಪ್ರಕಟ
ಇದನ್ನೂ ಓದಿ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಸಿಬಿ ತನಿಖೆಗೆ ವಹಿಸಿ ಆದೇಶ
ಇದನ್ನೂ ಓದಿ: ಭೋವಿ ಅಭಿವೃದ್ಧಿ ನಿಗಮದ ಅಕ್ರಮದ ತನಿಖೆ ಎದುರಿಸಿದ್ದ ಯುವತಿ ಆತ್ಮಹತ್ಯೆ: ತನಿಖಾಧಿಕಾರಿಗಳಿಂದ ಕಿರುಕುಳದ ಆರೋಪ