ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಇಂದು ಕೂಡ ಭಾರಿ ಗಾಳಿ ಮಳೆ ಮುಂದುವರೆದಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ, ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆ ಸುರಿಯುತ್ತಿದೆ. ನಿನ್ನೆ ರಾತ್ರಿಯಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಸ್ಥಳೀಯರು ಕಂಗಾಲಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸೇರಿ ಹಲವೆಡೆ ಮಳೆ ಸುರಿದಿದೆ. ಹತ್ತಾರು ಹಳ್ಳಿಗಳಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದೆ.
ಮಂಗಳೂರು, ಮೂಡಿಗೆರೆ, ಚಿಕ್ಕಮಗಳೂರಿನಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದು, ಭಾರಿ ಮಳೆಯಿಂದಾಗಿ ಆಂಬ್ಯುಲೆನ್ಸ್ ಚಾಲಕರಿಗೂ ಸಂಕಷ್ಟ ಎದುರಾಗಿದೆ. ಮಂಜು ಮಿಶ್ರಿತ ಮಳೆಯಿಂದಾಗಿ ರಸ್ತೆ ಕಾಣದೆ ನಿಂತಲ್ಲೇ ನಿಂತಿರುವ ವಾಹನಗಳಿಂದ ರಸ್ತೆ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ.
ನಿರಂತರವಾಗಿ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಜೀವ ಕಳೆ ಬಂದಿದೆ. ಇಲ್ಲಿನ ಸಹಜ ಸೊಬಗು ಹಾಗೂ ನೈಸರ್ಗಿಕ ಸೌಂದರ್ಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದು, ಪ್ರತಿನಿತ್ಯ ಪ್ರವಾಸಿಗರು ಮಳೆಯಲ್ಲೇ ನೆನೆದು ಎಂಜಾಯ್ ಮಾಡುತ್ತಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ: ಜು.5ರ ವರೆಗೆ ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ - heavy vehicle prohibition