ತುಮಕೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.
ಘಟನೆಯಲ್ಲಿ ಮೂವರು ಮೃತಪಟ್ಟು, ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿರುವ ವಿಚಾರ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಚಿಕಿತ್ಸೆ ಪಡೆಯುತ್ತಿರುವ ಹಿರಿಯರು, ಮಕ್ಕಳ ಆರೋಗ್ಯ ವಿಚಾರಿಸಿದರು. ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಗಮನ ಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೂ ಸಣ್ಣಪುಟ್ಟ ವ್ಯತ್ಯಾಸಗಳಾಗಿವೆ. ಮೂವರು ಮೃತಪಟ್ಟಿದ್ದು ಬೇಸರದ ಸಂಗತಿ. ಈಗಾಗಲೇ ಪರಿಸ್ಥಿತಿ ಸುಧಾರಿಸಿದ್ದು, ಬೇರೆ ಕಡೆಯೂ ಇಂತಹ ಸಮಸ್ಯೆ ಆಗದಂತೆ ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಲುಷಿತ ನೀರು ಸರಬರಾಜಿಗೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ವಾಟರ್ ಮ್ಯಾನ್ಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಜಾತ್ರಾ ಮಹೋತ್ಸವದಲ್ಲಿ ಕಲುಷಿತ ನೀರು ಸೇವನೆ: 15ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ - Devotees Fall Ill
ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಜೂ. 7ರಿಂದ ಲಕ್ಷ್ಮಿದೇವಿ ಮತ್ತು ಕೆಂಪಮ್ಮ ಜಾತ್ರೆ ಇತ್ತು. ಈ ವೇಳೆ ನಾನಾ ಭಾಗಗಳಿಂದ ಜನರು ಆಗಮಿಸಿದ್ದರು. ಜೂ. 10ರಂದು ರಾತ್ರಿ 54 ಮಂದಿಗೆ ದಿಢೀರ್ ವಾಂತಿ, ಭೇದಿ ಶುರುವಾಗಿ ಅವರನ್ನು ಆಸ್ಪತ್ರಗೆ ದಾಖಲಿಸಲಾಗಿತ್ತು. ಕೆಲವರು ತುಮಕೂರು ಜಿಲ್ಲಾಸ್ಪತ್ರೆ, ಇನ್ನು ಕೆಲವರು ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕೆಲವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವರು ಬಿಡುಗಡೆಯಾಗಿದ್ದರು. ಮಧುಗಿರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಮೀನಾಕ್ಷಿ (3) ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕದಾಸಪ್ಪ (76) ಮತ್ತು ಪೆದ್ದಣ್ಣ (74) ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಹಾವೇರಿಯಲ್ಲಿ ಅಧಿಕ ದರಕ್ಕೆ ಗೊಬ್ಬರ ಮಾರಾಟ ಆರೋಪ: ಕ್ರಮ ಖಚಿತವೆಂದ ಅಧಿಕಾರಿಗಳು - Fertilizer High Price