ಚಾಮರಾಜನಗರ: ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದೆ. ಈ ಬಾರಿಯ 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂ. ಸಂಗ್ರಹವಾಗಿದೆ ಎಂದು ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದ್ದಾರೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆದಿದೆ. ಈ ಬಾರಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಇದ್ದಿದ್ದರಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಇದಲ್ಲದೆ ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,58,44,097 ನಗದು, 93 ಗ್ರಾಂ ಚಿನ್ನ ಹಾಗೂ 3ಕೆಜಿ 350 ಗ್ರಾಂ ಬೆಳ್ಳಿ ವಸ್ತುಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೆ ಸೌದಿ ಅರೇಬಿಯಾ, ಜಪಾನ್, ನೇಪಾಳ, ಕತಾರ್ ದೇಶದ 4 ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 25 ನೋಟುಗಳು ಹುಂಡಿಯಲ್ಲಿ ಪತ್ತೆಯಾಗಿದೆ. ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ. ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 28 ದಿನದಲ್ಲಿ 1.82 ಕೋಟಿ ರೂ. ಸಂಗ್ರಹ