ವಿಜಯಪುರ: ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಸಿದ್ದಲಿಂಗ ಮುತ್ಯಾನ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಭಿಷೇಕ್ ಮುಜಗೊಂಡ (17), ಸೋಬು ಸಿಂದೆ (51), ಸುರೇಶ್ ಕಟಕದೊಂಡ (36) ಮೃತಪಟ್ಟವರೆಂದು ಗುರುತಿಸಲಾಗಿದೆ.
ಭಾನುವಾರ ರಥೋತ್ಸವದಲ್ಲಿ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದರು. ಜಾತ್ರೆಯಲ್ಲಿ ರಥ ಸಾಗುವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಆಯತಪ್ಪಿ ಏಳು ಜನ ರಥದ ಚಕ್ರಕ್ಕೆ ಸಿಲುಕಿದ್ದರು. ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಗೋಧೋಳಿ ಮುಹೂರ್ತದಲ್ಲಿ ರಥೋತ್ಸವ ನೆರವೇರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಜಾತ್ರಾ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಮೌನ ಆವರಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿಯುತ್ತಲೇ ಇಂಡಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಬೀಡು ಬಿಟ್ಟಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಚಿಕ್ಕಮಗಳೂರು: ಪ್ರವಾಸಿ ಮಿನಿ ಬಸ್ ಪಲ್ಟಿ; ಬಾಲಕ ಸಾವು, 29 ಮಂದಿಗೆ ಗಾಯ - Mini Bus Accident