ಬೆಂಗಳೂರು: ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಉದಯನಿಧಿ ಸ್ಟಾಲಿನ್ ಅವರಿಗೆ ಪ್ರಕರಣದಲ್ಲಿ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು, ಹಾಗೂ ವಿಚಾರಣೆಯನ್ನು ಮುಂದೂಡುವಂತೆ ವಕೀಲರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಆಗಸ್ಟ್ 8ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಹಾಗೂ ಉದಯನಿಧಿ ಅವರಿಗೆ 1 ಲಕ್ಷ ಬಾಂಡ್ ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, "ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಹಾಗೂ ಕೊರೋನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿರುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು'' ಎಂದು ಹೇಳಿಕೆ ನೀಡಿದ್ದರು. ಉದಯನಿಧಿ ಅವರ ಹೇಳಿಕೆಯನ್ನು ಖಂಡಿಸಿದ್ದ ಅನೇಕ ಹಿಂದೂ ಮುಖಂಡರು, ಉದಯನಿಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.
ಇದನ್ನೂ ಓದಿ: ಸನಾತನ ಧರ್ಮದ ಕುರಿತು ವಿವಾದಾತ್ಮ ಹೇಳಿಕೆ ಪ್ರಕರಣ: ಉದಯನಿಧಿ ಸ್ಟಾಲಿನ್ಗೆ ಅರಾ ಕೋರ್ಟ್ ಸಮನ್ಸ್ ಜಾರಿ