ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಇಂದು ಪಕ್ಷದ ಕಾರ್ಯಕರ್ತರು, ಮುಖಂಡರ ಜೊತೆ ಸಮಾಲೋಚನೆ ನಡೆಸಿದರು. ಮಾಜಿ ಶಾಸಕ ಹಾಗೂ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವಂತೆ ಪಕ್ಷದ ಮುಖಂಡರಿಗೆ ಸೂಚಿಸಿದರು.
ಜೆ.ಪಿ.ನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ, ಅಭ್ಯರ್ಥಿ ಆಯ್ಕೆ ಸೇರಿದಂತೆ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಒಮ್ಮತವಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚಿಸಿದರು. ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಯಾರೇ ಆದರೂ ಅವರು ಎನ್ಡಿಎ ಅಭ್ಯರ್ಥಿ ಆಗಿರುತ್ತಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಎಲ್ಲರೂ ಒಮ್ಮತವಾಗಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನುವುದು ನಮ್ಮೆಲ್ಲರ ಗುರಿಯಾಗಬೇಕು ಎಂದು ಮುಖಂಡರಿಗೆ ಸ್ಪಷ್ಟವಾಗಿ ಹೇಳಿದರು.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಪ್ರಮುಖ ಮುಖಂಡರೆಲ್ಲ ಹೋಗಿ ಖುದ್ದು ಭೇಟಿ ಮಾಡಿ, ಮುಕ್ತವಾಗಿ ಚರ್ಚಿಸಿ ಎಂದು ಮುಖಂಡರಿಗೆ ಸೂಚಿಸಿದ ಕುಮಾರಸ್ವಾಮಿ, ಯೋಗೇಶ್ವರ್ ಅವರನ್ನು ಎಲ್ಲಾ ಹಂತಗಳಲ್ಲಿಯೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಅವರ ಮಾರ್ಗದರ್ಶನ ಪಡೆಯಬೇಕು ಎಂದು ತಿಳಿಸಿದರು.
ಮುಂದಿನ ವಾರ ನಾನು ಮತ್ತೆ ಬೆಂಗಳೂರಿಗೆ ಬರುತ್ತೇನೆ. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಹಾಗೂ ಬಿಜೆಪಿಯ ರಾಜ್ಯ, ರಾಷ್ಟ್ರೀಯ ನಾಯಕರ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.
ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಚನ್ನಪಟ್ಟಣ ಕ್ಷೇತ್ರದ ಎಲ್ಲಾ ಪ್ರಮುಖ ನಾಯಕರು, ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ: ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ: ಹೆಚ್.ಡಿ. ಕುಮಾರಸ್ವಾಮಿ - H D Kumaraswamy