ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಎ1 ಆರೋಪಿಯನ್ನಾಗಿ ಪರಿಗಣಿಸಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮಂಗಳವಾರ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಈ ಹಿಂದೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ ನಾಗೇಂದ್ರ ಅವರ ಹೆಸರು ಇರಲಿಲ್ಲ. ಆದರೆ, ಇ.ಡಿ. ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಮಾಜಿ ಸಚಿವರನ್ನೇ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. ಇದರ ಜೊತೆಗೆ, ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ವರ್ಮಾ ಕೂಡ ಜಂಟಿ ಪ್ರಥಮ ಆರೋಪಿಯಾಗಿದ್ದಾರೆ.
5114 ಪುಟಗಳ ದೋಷಾರೋಪ ಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ ಸೇರಿದಂತೆ 24 ಮಂದಿ ವಿರುದ್ಧ ಆರೋಪ ಹೊರಿಸಲಾಗಿದೆ. ಪ್ರಕರಣದ ಸಂಬಂಧ ಮಾಜಿ ಸಚಿವರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ನಿಗಮದ ಕೋಟ್ಯಂತರ ರೂಪಾಯಿ ಹಣವನ್ನ ತೆಲಂಗಾಣ ಲೋಕಸಭಾ ಚುನಾವಣೆಯಲ್ಲಿ ಮದ್ಯ ಖರೀದಿಗೆ ವಿನಿಯೋಗಿಸಲಾಗಿದೆ ಎಂದು ಚಾರ್ಜ್ಶೀಟ್ನಲ್ಲಿ ನಮೂದಿಸಿರುವುದಾಗಿ ಮೂಲಗಳು ತಿಳಿಸಿವೆ.
ಇದೇ ಪ್ರಕರಣದಲ್ಲಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಈ ಕುರಿತು ಇ.ಡಿ ಕೂಡ ವಿಚಾರಣೆ ನಡೆಸಿದೆ. ಆದರೆ, ತನಿಖೆಯಲ್ಲಿ ದದ್ದಲ್ ಪಾತ್ರದ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ಲಭಿಸದ ಕಾರಣ ಆರೋಪಪಟ್ಟಿಯಲ್ಲಿ ಅವರ ಹೆಸರು ಉಲ್ಲೇಖಿಸಿಲ್ಲ ಎಂದು ತಿಳಿದು ಬಂದಿದೆ.
ಎಸ್ಐಟಿ ಪಟ್ಟಿಯಲ್ಲೇನಿತ್ತು?: ಪ್ರಕರಣ ಬಯಲಾದ ಬಳಿಕ ಮೊದಲು ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಬಳಿಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದರಲ್ಲಿ ಆರೋಪ ಕೇಳಿ ಬಂದಿದ್ದ ಮಾಜಿ ಸಚಿವ ನಾಗೇಂದ್ರ ಅವರ ಹೆಸರನ್ನೇ ಉಲ್ಲೇಖಿಸಲಿರಲಿಲ್ಲ. ಸತ್ಯನಾರಾಯಣ ವರ್ಮಾ, ಸತ್ಯನಾರಾಯಣ ಇಟಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಆರೋಪಿಗಳ ಮೇಲೆ ಆರೋಪ ಮಾಡಲಾಗಿತ್ತು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಕೆ.ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಸಂಬಂಧ ಶಿವಮೊಗ್ಗ ನ್ಯಾಯಾಲಯಕ್ಕೆ ಎಸ್ಐಟಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲೂ ನಾಗೇಂದ್ರ ಅವರ ಹೆಸರು ಪ್ರಸ್ತಾಪ ಆಗಿರಲಿಲ್ಲ.