ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವಂತೆ ಕೋರಿರುವ ಅರ್ಜಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಗಳ ಆದೇಶಗಳು ಇಂದು (ಫೆ.7) ದಂದು ಧಾರವಾಡ ಪೀಠದಲ್ಲಿ ಪ್ರಕಟವಾಗಲಿವೆ.
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಕೋರಿ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ಹಾಗೂ ತಮ್ಮ ಮೇಲಿನ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶವನ್ನು ಕಾಯ್ದಿರಿಸಿತ್ತು. ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶಕ್ಕೆ ಪಟ್ಟಿ ಮಾಡಲಾಗಿದೆ.
ಸ್ನೇಹಮಯಿ ಕೃಷ್ಣ ಅರ್ಜಿ : ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಮಣೀಂದ್ರ್ ಸಿಂಗ್, ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಸಿದ್ದರಾಮಯ್ಯ ಪತ್ನಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದಾರೆ.
ಪ್ರಕರಣದ ಹಿನ್ನೆಲೆ : ಪ್ರಕರಣ ಸಂಬಂಧ ಅರ್ಜಿದಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮುಡಾದಿಂದ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಈಗಾಗಲೇ ಪ್ರಕರಣದ ತನಿಖೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಆದರೆ, ಸಿದ್ದರಾಮಯ್ಯ ರಾಜ್ಯದ ಹಾಲಿ ಮುಖ್ಯಮಂತ್ರಿ ಆಗಿದ್ದು, ರಾಜ್ಯ ಸರ್ಕಾರದ ಇಲಾಖೆಗಳ ಮೇಲೆ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್ ಪ್ರಾಧಿಕಾರಗಳಂತಹ ತನಿಖಾ ಸಂಸ್ಥೆಗಳ ಮೇಲೆ ಭಾರೀ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಕೋರಿದ್ದರು.
ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅರ್ಜಿ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದರು. ಬಿ.ಎಸ್. ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ಹಾಗೂ ಸರ್ಕಾರದ ಪರ ಹಿರಿಯ ವಕೀಲ ಪ್ರೋ. ರವಿವರ್ಮ ಕುಮಾರ್ ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು.
ಇದನ್ನೂ ಓದಿ: ದೇಶವನ್ನು ರಕ್ಷಿಸುವ ರಕ್ಷಣಾ ಸಿಬ್ಬಂದಿಯನ್ನು ಸರ್ಕಾರದ ಸಂಸ್ಥೆಗಳು ಕನಿಷ್ಠ ಗೌರವದಿಂದಲಾದರೂ ನಡೆಸಿಕೊಳ್ಳಬೇಕು
ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಇದನ್ನೂ ಓದಿ: ಅದಾಯಕ್ಕಿಂತ ಹೆಚ್ಚು ಆಸ್ತಿಯಿರುವ ಜನಪ್ರತಿನಿಧಿಗಳ ಲೋಕಾಯುಕ್ತ ತನಿಖೆಗೆ ಕೋರಿದ್ದ ಅರ್ಜಿ ವಜಾ