ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬರುವ ಮತಗಟ್ಟೆಗಳ ಪೈಕಿ ಕಳೆದ ಬಾರಿ ಸುಮಾರು 935 ಮತಗಟ್ಟೆಗಳಲ್ಲಿ ಮತದಾನದ ಪ್ರಮಾಣ ಶೇಖಡವಾರು ಕಡಿಮೆಯಾಗಿರುತ್ತದೆ. ಈ ಸಂಬಂಧ ಆಯಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಮನೆ- ಮನೆಗೆ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ತಪ್ಪದೆ ಮತದಾನ ಮಾಡಲು ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಜಯ ಕಾಲೇಜಿನಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಹಾಗೂ ಮೇಲ್ವಿಚಾರಕರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಮತದಾನದ ಪ್ರಮಾಣ ಕಡಿಮೆ ಆಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಈ ಬಾರಿ ಹೆಚ್ಚು ಆದ್ಯತೆ ನೀಡಿ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕು. ಪ್ರತಿ ಚುನಾವಣೆಯಲ್ಲೂ ಮತದಾನ ಮಾಡುವಾಗ ನಿಗದಿತ ಶೇಖಡವಾರು ಪ್ರಮಾಣ ತಲುಪಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಬೂತ್ ಮಟ್ಟದ ಮೇಲ್ವಿಚಾರಕರು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂದು ತಿಳಿಸಿದರು.
ಮತದಾರರು ವೋಟರ್ ಹೆಲ್ಪ್ ಲೈನ್‌ಗೆ ಭೇಟಿ ನೀಡಿ ಮತದಾನ ಗುರುತಿನ ಚೀಟಿಯ ಸಂಖ್ಯೆ ನಮೂಸಿದರೆ ಸಾಕು ಮತಗಟ್ಟೆ ಹಾಗೂ ವಿಳಾಸದ ಲಭ್ಯವಾಗಲಿದೆ. ಇದೀಗ ಮತಗಟ್ಟೆಗೆ ಲೊಕೇಶನ್ ಹಾಕಿಕೊಂಡು ತೆರಳುವ ವ್ಯವಸ್ಥೆಯ ಸಾಪ್ಟ್ವೇರ್ ಕೂಡಾ ಸಿದ್ದಪಡಿಸಲಾಗುತ್ತಿದೆ ಎಂದು ಹೇಳಿದರು.
ಲೋಕಸಭಾ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಎಲ್ಲರೂ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಪ್ರೇರೇಪಿಸಬೇಕು. ಬೂತ್ ಮಟ್ಟದಲ್ಲಿ ಮೈಕ್ರೋ ಲೆವೆಲ್ ಕಾರ್ಯಕ್ರಮಗಳನ್ನು ರೂಪಿಸಿಕೊಂಡು, ಮತಗಟ್ಟೆಗೆ ನಿಗದಿಯಾಗಿರುವ ಶೇಕಡಾವಾರು ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದರು.
ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಕಾಂತರಾಜು ಮಾತನಾಡಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಪೂರ್ವಭಾವಿಯಾಗಿ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.
ಈ ವೇಳೆ ಬೆಂಗಳೂರು ನಗರ ಜಿಲ್ಲೆಯ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸ್ವೀಪ್ ನೋಡಲ್ ಅಧಿಕಾರಿ ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.