ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15 ರಿಂದ 20 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ವಿವಿಧ ರಾಜಕೀಯ ಪಕ್ಷಗಳಿಗೆ ಮತ ಚಲಾಯಿಸುತ್ತಾರೆ. ಹಾಗಾಗಿ ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿಲ್ಲ. ನಾವು ಅಂಥ ಹೇಳಿಕೆ ನೀಡಲು ಹೋಗುವುದಿಲ್ಲ. ಬಿಜೆಪಿ ಎದುರಿಸಲು ಮತ್ತು ನಮ್ಮ ಶಕ್ತಿಗೆ ಅನುಗುಣವಾಗಿ ಸ್ಥಾನ ಗೆಲ್ಲಲು ತಂತ್ರ ಹೆಣೆಯುತ್ತಿದ್ದೇವೆ ಎಂದರು.
ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀರಾಮ ಇದ್ದಾರೆ. ಶ್ರೀರಾಮನು ಬಿಜೆಪಿಗೆ ಮಾತ್ರ ಸೀಮಿತವಾಗಿಲ್ಲ. ಬಿಜೆಪಿಯವರು ರಾಮನ ಹೆಸರಿನಲ್ಲಿ ಮತದಾರರನ್ನು ಸೆಳೆಯಲು ಹೆಚ್ಚಿನ ಪ್ರಯತ್ನ ನಡೆಸಿದ್ದಾರೆ. ಆದರೆ, ಎಲ್ಲ ಪಕ್ಷದವರೂ ರಾಮನನ್ನು ಪೂಜಿಸುತ್ತಾರೆ. ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ವೇಳೆ, ಅನೇಕ ಮನೆಗಳ ಮೇಲೆ ರಾಮನ ಧ್ವಜ ಅಳವಡಿಸಲಾಗಿತ್ತು. ನಮ್ಮ ಕಾರ್ಯಕರ್ತರ ಮನೆಗಳ ಮೇಲೂ ಧ್ವಜ ಹಾರಿಸಲಾಗಿದೆ. ಹಾಗಂತಾ ಅವರೆಲ್ಲಾ ಬಿಜೆಪಿಗೆ ಮತ ಹಾಕುತ್ತಾರೆ ಎಂದರ್ಥ ಅಲ್ಲ ಎಂದು ಹೇಳಿದರು.
ಚಿಕ್ಕೋಡಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಟ್ಟರೆ ಗೆಲ್ಲಬಹುದೆಂದು ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಲ್ಲಿನ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಈಗಾಗಲೇ ಅಭಿಪ್ರಾಯ ಸಂಗ್ರಹಿಸಿದ್ದು, ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಶೀಘ್ರದಲ್ಲೇ ಅಭಿಪ್ರಾಯ ಸಂಗ್ರಹಿಸುತ್ತೇವೆ. ಇನ್ನು ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾ.20ರಂದು ಅಭಿಪ್ರಾಯ ಸಂಗ್ರಹ ಮಾಡಲಾಗುವುದು ಎಂದರು. ಬೆಳಗಾವಿ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಿಸಿಲ್ಲ. ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂದು ಕಾದು ನೋಡುತ್ತಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆ ಉತ್ತರಿಸಿ, ಅದಕ್ಕೂ ನಮಗೂ ಸಂಬಂಧವಿಲ್ಲ. ಇನ್ನೂ ಕೆಲ ಹಂತದ ಸಭೆ ಮಾಡಿ ಅಭ್ಯರ್ಥಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿನ ಅಸಮಾಧಾನ ಮುನ್ನೆಲೆಗೆ ಬಂದಿತ್ತು. ಈಗಲೂ ಅದು ಮುಂದುವರಿದಿದೆ. ಆ ಪಕ್ಷದಿಂದ ದೂರ ಸರಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರೆ ಸ್ವಾಗತಿಸುತ್ತೇವೆ. ರಮೇಶ ಕತ್ತಿ ಕಾಂಗ್ರೆಸ್ ಸೇರುತ್ತಾರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬರಲು ಯಾವುದೇ ಅಡೆತಡೆ ಇಲ್ಲ. ಆದರೆ, ಅವರಿಗೆ ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೆ ಎಂದು ಹೇಳಿದರು.
ಮೋದಿ ಗೆಲ್ಲಿಸಿ, ದೇಶ ಉಳಿಸಿ ಅಭಿಯಾನ ನಡೆಯುತ್ತಿರುವ ಬಗ್ಗೆ ಮಾತನಾಡಿ, ಚುನಾವಣೆಯಲ್ಲಿ ಎಲ್ಲ ಪಕ್ಷದವರೂ ಒಂದಿಲ್ಲೊಂದು ತಂತ್ರ ಮಾಡುತ್ತಾರೆ. ನಾವು ಸಂವಿಧಾನ ಉಳಿಸಿ, ಕಾಂಗ್ರೆಸ್ ಗೆಲ್ಲಿಸಿ ಎಂದು ಅಭಿಯಾನ ನಡೆಸುತ್ತೇವೆ. ಬಿಜೆಪಿಯ ಹಿಂದುತ್ವದ ಅಜೆಂಡಾ ಎದುರಿಸಲು ಎಲ್ಲ ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ನಮ್ಮ ಶಕ್ತಿ ಇರುವ ಕಡೆ ಮಾತ್ರ ಟಿಕೆಟ್ ಕೇಳಿದ್ದೇವೆ: ಜಿ ಟಿ ದೇವೇಗೌಡ