ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಾಗಿರುವ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿ. ಕೆ ಶಿವಕುಮಾರ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಬೆಂಗಳೂರು ನಿವಾಸದ ಬಳಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾನು ಆ ಬಗ್ಗೆ ಓದಿಲ್ಲ. ನೋಡಿ ಹೇಳ್ತೇನೆ. ಫ್ಯಾಕ್ಟ್ ಆ್ಯಂಡ್ ಫಿಗರ್ಸ್ ಹೇಳಬೇಕು. ತಿಳಿದುಕೊಂಡು ಮಾತನಾಡ್ತೇನೆ ಎಂದರು. ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ. ಕೆ ಶಿವಕುಮಾರ್, ಅದರ ಬಗ್ಗೆ ನಮಗೆ ಇನ್ನೂ ಗೊತ್ತಿಲ್ಲ. ಏನಿದೆ ಎಂದು ತಿಳಿದು ಮಾತನಾಡುತ್ತೇನೆ ಎಂದು ತಿಳಿಸಿದರು.
ಸಿಎಂ ರಾಜೀನಾಮೆಗೆ ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅದರ ಬಗ್ಗೆ ಎಐಸಿಸಿ ಅಧ್ಯಕ್ಷರೇ ಮಾತನಾಡಿದ್ದಾರೆ. ಹಾಗಾಗಿ ಹೆಚ್ಚಿಗೆ ಹೇಳುವುದೇನಿಲ್ಲ ಎಂದರು.
ಏನಿದು ಪ್ರಕರಣ?: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿನ್ನೆ (ಶುಕ್ರವಾರ) ಆದೇಶ ನೀಡಿತ್ತು.
ಚುನಾವಣಾ ಬಾಂಡ್‌ಗಳ ಮೂಲಕ ಹೆದರಿಸಿ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ನ ಆದರ್ಶ ಅಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ಈ ದೂರನ್ನು ವಿಚಾರಣೆಗೆ ಪರಿಗಣಿಸಿರುವ ನ್ಯಾಯಾಲಯವು, ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ್ದಾರೆನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ತಿಲಕ್ ನಗರ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಸೂಚಿಸಿದೆ.
ಇದನ್ನೂ ಓದಿ : ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ: ಸೀತಾರಾಮನ್ ವಿರುದ್ಧ FIR ದಾಖಲಿಸುವಂತೆ ಕೋರ್ಟ್ ಆದೇಶ - case against Nirmala Sitharaman