ಬೆಂಗಳೂರು: ಲೋಕಸಭಾ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರದಲ್ಲಿ ಸರಿಯಾದ ಮಾಹಿತಿ ಒದಗಿಸದ ಆರೋಪದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ.ಪಟೇಲ್ ಆಯ್ಕೆ ಅಸಿಂಧು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವಕೀಲ ಜಿ.ದೇವರಾಜೇಗೌಡ ಪುತ್ರ ಡಿ.ಚರಣ್ ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಯ ಸಂಬಂಧ ಆಕ್ಷೇಪಣೆ ಸಲ್ಲಿಸಲು ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಶ್ರೇಯಸ್ ಪಟೇಲ್ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ಪ್ರಾಮಾಣಿಕವಾಗಿ ನಮೂದಿಸಿಲ್ಲ. ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿಲ್ಲ. ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಚುನಾವಣಾ ವೆಚ್ಚದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಹಾಗಾಗಿ, ಅವರ ಆಯ್ಕೆ ರದ್ದುಗೊಳಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠವು ಕಾಂಗ್ರೆಸ್ ಸಂಸದರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಓದಿ: ಪಂಜಾಬ್ ಗಡಿಯಲ್ಲಿ ಹೃದಯಾಘಾತದಿಂದ ಚಾಮರಾಜನಗರದ ಯೋಧ ಸಾವು - SOLDIER DIES OF HEART ATTACK