ಬೆಂಗಳೂರು: ಮುಂಗಾರು ಮಳೆ ತನ್ನ ಆರ್ಭಟ ಮುಂದುವರಿಸಿದೆ. ಇದರಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿ, ಸಾವು ನೋವು ಸಂಭವಿಸಿವೆ. ಹಲವು ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಬಿರುಸುಗೊಂಡಿದೆ. ಈ ಹಿನ್ನೆಲೆ ಭಾನುವಾರಕ್ಕೆ ಅನ್ವಯವಾಗುವಂತೆ ಹವಾಮಾನ ಇಲಾಖೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರ ಜೊತೆಗೆ ಮುಂದಿನ ವಾರದಲ್ಲಿ ಮಳೆ ಕಡಿಮೆ ಆಗಲಿದೆ ಎಂಬ ಸುಳಿವನ್ನು ಸಹ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಯಾದಗಿರಿ, ವಿಜಯಪುರ, ಕೊಪ್ಪಳ, ಕಲಬುರಗಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗಿನಲ್ಲಿ ಭಾನುವಾರ ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಯಾದಗಿರಿ, ಶಿವಮೊಗ್ಗದ ಆಗುಂಬೆ, ಹಾವೇರಿ, ಕಲಬುರಗಿಯ ಅಳಂದ, ಬೆಂಗಳೂರು ಗ್ರಾಮಾಂತರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ವರ್ಷಧಾರೆಯಾಗಿದೆ. ಉತ್ತರ ಕರ್ನಾಟಕದ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 18 ರಿಂದ 21ರ ವರೆಗೆ ಗುಡುಗು ಸಹಿತ ಭಾರಿ ಮಳೆ ಬೀಳುವ ಸಂಭವವಿದೆ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ಮುಂದಿನ ಮೂರು ದಿನ ಮಳೆ ಸುರಿಯಲಿದೆ. ಆಗಸ್ಟ್ 22ರಿಂದ ರಾಜ್ಯದಲ್ಲಿ ಮಳೆ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ ಎಂದಿದೆ.
ಈ ಕುರಿತು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಮಾತನಾಡಿ, ಚಂಡಮಾರುತದ ಪರಿಚಲನೆಯು ಕರ್ನಾಟಕದ ದಕ್ಷಿಣ ಒಳಭಾಗ ಮತ್ತು ನೆರೆಹೊರೆಯ ಮೇಲೆ ಇದೆ. ಮಧ್ಯಮ ಉಷ್ಣವಲಯದ ಹಂತದವರೆಗೆ ವಿಸ್ತರಿಸಲಿದೆ. ಈ ಟ್ರಫ್ ಈಗ ಉತ್ತರ ಆಂತರಿಕ ಕರ್ನಾಟಕದಿಂದ ಕೊಮೊರಿನ್ ಪ್ರದೇಶದವರೆಗೆ ಚಂಡಮಾರುತದ ರೂಪದಲ್ಲಿ ಹಾದುಹೋಗುತ್ತಿದೆ. ಆದ್ದರಿಂದ ಮುಂಗಾರು ಮಳೆ ಉತ್ತರ ಒಳ ನಾಡಿನಲ್ಲಿ ಪ್ರಬಲವಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದೆ ಮತ್ತು ಕರಾವಳಿ ಭಾಗದಲ್ಲಿ ದುರ್ಬಲವಾಗಿ ಕಂಡು ಬರುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ತುಂಗಭದ್ರಾ ಡ್ಯಾಂಗೆ ಮೂರು ಎಲಿಮೆಂಟ್ ಅಳವಡಿಕೆ ಯಶಸ್ವಿ: ಪೋಲಾಗುತ್ತಿದ್ದ ನೀರಿಗೆ ತಡೆ - Tungabhadra Dam