ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಾಣ ಮಳೆಯಾಗಲಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜಧಾನಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28ರಿಂದ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

''ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದೆ. ಇಂದು ಕರಾವಳಿ ಕರ್ನಾಟಕದ ಬಹುತೇಕ ಸ್ಥಳಗಳಲ್ಲಿ, ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ನಿನ್ನೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ಅತಿಹೆಚ್ಚು 8 ಸೆಂ.ಮೀ. ಮಳೆ ಸುರಿದಿದೆ'' ಎಂದು ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಡಾ.ಎನ್. ಪುವಿಯರಸನ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹೈದರಾಬಾದ್ನಲ್ಲಿ ಭಾರಿ ಮಳೆ: ಹುಸೇನ್ ಸಾಗರ್ ಸರೋವರ ಸಂಪೂರ್ಣ ಭರ್ತಿ - HUSSAIN SAGAR LAKE