ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊನೆಗೊಳ್ಳಲು ಇನ್ನೊಂದು ದಿನ ಬಾಕಿ ಉಳಿದಿದೆ. ಕೆಲವೆಡೆ ಮಳೆ ಮುಂದುವರೆದಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಹಾಸನ, ಮಂಡ್ಯ, ಮೈಸೂರು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಿಲಿಕಾನ್ ಸಿಟಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ, ಸರ್ಕಾರಿ ಶಾಲೆ ಜಲಾವೃತ - Davanagere Rain